This is the title of the web page
This is the title of the web page
Local News

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಶು ಅಭಿವೃದ್ಧಿ ಯೋಜನೆ ಜಾರಿ


ರಾಯಚೂರು : ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ೦7 ತಾಲೂಕುಗಳಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಲ್ಲಿ ಪ್ರಗತಿ ಸಾಧಿಸಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗಿದ್ದು, ಯಾವುದೇ ಯೋಜನೆಯನ್ನು ಅನುಷ್ಟಾನಗೊಳಿಸಲು ಇಚ್ಛಾಶಕ್ತಿ ಅತ್ಯವಶ್ಯಕವಾಗಿದೆ ಎಂದರು.

ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಲಕೊಳ್ಳುವ ಮೂಲಕ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದು ಹೇಳಿದರು.

ಮಕ್ಕಳ ಸರ್ವತೋಮುಖ ಅಭಿವೃದ್ದಿಗಾಗಿ 7 ತಾಲೂಕುಗಳಲ್ಲಿ 8 ಸಮಗ್ರ ಶಿಶು ಅಭಿವೃದ್ದಿ ಯೋಜನೆಗಳನ್ನು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 2,627 ಅಂಗನವಾಡಿ ಕೇಂದ್ರಗಳು, 41 ಮಿನಿ ಅಂಗನವಾಡಿ ಕೇಂದ್ರಗಳು ಇವುಗಳಲ್ಲಿ 2022-23ನೇ ಸಾಲಿನ ಅಕ್ಟೋಬರ್ ಮಾಹೆಯ ಅಂತ್ಯಕ್ಕೆ 2,50,018 ಫಲಾನುಭವಿಗಳು ಸಮಗ್ರ ಶಿಶು ಅಭಿವೃದ್ದಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

ಆಂಗನವಾಡಿ ಕೇಂದ್ರಗಳ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮ, ಚುಚ್ಚುಮದ್ದು ಕಾರ್ಯಕ್ರಮ, ಆರೋಗ್ಯ ತಪಾಸಣೆ, ತಾಯಂದಿರಿಗೆ ಆರೋಗ್ಯ ಮತ್ತು ಪೌಷ್ಠಿಕ ಶಿಕ್ಷಣ, ಶಾಲಾ ಪೂರ್ವ ಶಿಕ್ಷಣ ಹಾಗೂ ಮಾಹಿತಿ ಸೇವೆಯನ್ನು ಇಲಾಖೆಯಿಂದ ಒದಗಿಸಲಾಗುತ್ತಿದ್ದು, ಈ ಸೇವೆಗಳನ್ನು ಒದಗಿಸಲು ಹೆಚ್ಚಿನ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


[ays_poll id=3]