ರಾಯಚೂರು ನಗರದ ಕುಲಸುಂಬಿ ಕಾಲೋನಿಯಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ, ರುಂಡದೊಂದಿಗೆ ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ತಿರುಪತಿ (24) ಕೊಲೆಯಾದ ವ್ಯಕ್ತಿ. ಮೃತನ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲಿನ ಬೀಗ ಮುರಿದು ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲೆ ಬಳಿಕ ಆರೋಪಿ ತಲೆ ತೆಗೆದುಕೊಂಡು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ತಿರುಪತಿ ವಿರುದ್ಧ ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಬೈಕ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ.
ಕೆಲವು ವರ್ಷಗಳ ಹಿಂದೆ ಮೃತನ ಅಣ್ಣನೂ ಕೊಲೆಯಾಗಿದ್ದ ಮಾಹಿತಿ ಲಭ್ಯವಾಗಿದೆ. ಘಟನೆಗೂ ಮುನ್ನ ತಿರುಪತಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದನೆಂದು ಎನ್ನಲಾಗುತ್ತಿದೆ. ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.