
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮುಂದುವರಿದಿದ್ದು, ರಾಜೀನಾಮೆಗಳ ಸರಣಿ ಆರಂಭವಾಗಿದೆ. ಇದೀಗ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ದದ್ದಲ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಸ್ವಇಚ್ಛೆಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ಕೂಡಲೇ ರಾಜೀನಾಮೆಯನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ನೊಳಗೆ ಅಸಮಾಧಾನ ವ್ಯಕ್ತವಾಗುತ್ತಿರುವ ಸಂದರ್ಭದಲ್ಲೇ ದದ್ದಲ್ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಈಗಾಗಲೇ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಶಾಸಕರು ಹಾಗೂ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ.