ರಾಯಚೂರು: ಸಾರಿಗೆ ಬಸ್‌ನ ಬ್ರೇಕ್ ಫೇಲ್ ಆಗಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.
ಮೃತರನ್ನು ನಗರದ ಅಂದ್ರೂನ್ ಕಿಲ್ಲಾ ನಿವಾಸಿ ಯಾಸೀನ್ (28) ಎಂದು ಗುರುತಿಸಲಾಗಿದೆ. ಸಾರಿಗೆ ಬಸ್‌ನ ಬ್ರೇಕ್ ಫೇಲ್ ಆದ ಕಾರಣ ನಿಯಂತ್ರಣ ತಪ್ಪಿದ ಬಸ್, ಬೈಕ್‌ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಯಾಸೀನ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಬಂಧ ರಾಯಚೂರು ನಗರ ಟ್ರಾಫಿಕ್ ಪೊಲೀಸರು ಸಾರಿಗೆ ಬಸ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಸ್ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದ್ದು, ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಬಸ್‌ನ ಬ್ರೇಕ್ ವೈಫಲ್ಯದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕನ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.