ರಾಯಚೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಅರಕೇರಾ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಹಾರ್ಮ್ ರಿಸರ್ವ್ ಪೊಲೀಸ್ ಸಿಬ್ಬಂದಿ ರೇಣುಕಾರಾಜ್ (33) ಮೃತ ದುರ್ದೈವಿ.
ರೇಣುಕಾರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಕೇರಾ ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದರು. ಆಸ್ಪತ್ರೆಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ ವೇಳೆ ಕ್ಷಣಾರ್ಧದಲ್ಲಿ ಹೃದಯಾಘಾತ ಸಂಭವಿಸಿದ್ದು, ಅವರು ಕುಳಿತಿದ್ದ ಸ್ಥಳದಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಸಹೋದ್ಯೋಗಿಗಳು ವೈದ್ಯರನ್ನು ಕರೆತರಲು ಮುಂದಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ.
ಘಟನೆಯ ಸಂಪೂರ್ಣ ದೃಶ್ಯ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೃದಯಾಘಾತದ ತೀವ್ರತೆಯನ್ನು ತೋರಿಸಿದೆ. ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಹೋದ್ಯೋಗಿಗಳು ಹಾಗೂ ಕುಟುಂಬಸ್ಥರು ರೇಣುಕಾರಾಜ್ ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ತವ್ಯನಿರತ ಸಿಬ್ಬಂದಿಯ ಸಾವಿನಿಂದ ಪೊಲೀಸ್ ಇಲಾಖೆಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.