ಬೆಂಗಳೂರು : ಕರ್ನಾಟಕದಲ್ಲಿ 2026ರ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ರಾಜ್ಯ ಚುನಾವಣಾ ಆಯೋಗ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಆದರೆ ಬಹುತೇಕ ಗ್ರಾಮ ಪಂಚಾಯಿತಿಗಳ ಸದಸ್ಯರ ಅಧಿಕಾರಾವಧಿ ಫೆಬ್ರವರಿ-ಮಾರ್ಚ್ ವೇಳೆಗೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದೆ.
ಅಕ್ಟೋಬರ್‌ನಿಂದ ಡಿಸೆಂಬರ್ ಅವಧಿಯಲ್ಲಿ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈಗಾಗಲೇ ಕ್ಷೇತ್ರಗಳ ವಿಂಗಡಣೆ, ವಾರ್ಡ್‌ಗಳ ಪುನರ್‌ವಿನ್ಯಾಸ ಹಾಗೂ ಮೀಸಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಕಾರ್ಯದಲ್ಲಿ ತೊಡಗಿದೆ.
ಈ ಪ್ರಕ್ರಿಯೆಗಳು ಮುಗಿದ ಬಳಿಕ ಚುನಾವಣಾ ಆಯೋಗಕ್ಕೆ ಅಗತ್ಯ ಮಾಹಿತಿ ಸಲ್ಲಿಸಲಾಗುತ್ತದೆ. ನಂತರ ಆಯೋಗವು ಮತದಾರರ ಪಟ್ಟಿ ಪರಿಶೀಲನೆ ಸೇರಿದಂತೆ ಚುನಾವಣಾ ಸಿದ್ಧತೆಗಳನ್ನು ಕೈಗೊಳ್ಳಲಿದೆ. ಶೀಘ್ರದಲ್ಲೇ ಗ್ರಾಮ ಪಂಚಾಯಿತಿ ಚುನಾವಣೆಯ ಅಧಿಕೃತ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದ್ದು, ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ.