ರಾಯಚೂರು: ತಾಲ್ಲೂಕಿನ ವಡವಾಟಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಅಕ್ರಮ ಮರಂ ಗಣಿಗಾರಿಕೆ ಮತ್ತು ಸಾಗಾಟ ನಿರಂತರವಾಗಿ ನಡೆಯುತ್ತಿದ್ದು, ಇದಕ್ಕೆ ರಾಜಕೀಯ ಬೆಂಬಲವಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಕೆಲ ಮುಖಂಡರೇ ಈ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.
ಅಕ್ರಮದಲ್ಲಿ ತೊಡಗಿದ ಕೆಲವು ವ್ಯಕ್ತಿಗಳು ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೇಸ್ ನ ಪ್ರಭಾವಿಗಳ ಹೆಸರು ಹೇಳಿಕೊಂಡು ಅಕ್ರಮದಲ್ಲಿ ತೊಡಗಿದ್ದಾರೆ. ಇನ್ನಷ್ಟು ಜನ ಡಿಎಸ್ಎಸ್ ಸಂಘಟನೆಗಳ ಹೆಸರನ್ನೂ ದುರುಪಯೋಗಪಡಿಸಿಕೊಂಡು ಮರಂ ಸಾಗಾಟ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪವಿದೆ.
ರಾಯಚೂರು ನಗರದಿಂದ ಕೇವಲ 10 ಕಿಲೋಮೀಟರ್ ದೂರದಲ್ಲೇ ಈ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 15 ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಪರಿಣಾಮವಾಗಿ ಉತ್ತಮ ಗುಣಮಟ್ಟದ ಕೃಷಿ ಭೂಮಿಗಳು ಹಾಳಾಗಿದ್ದು, ಕೃಷಿಗೆ ಯೋಗ್ಯತೆಯನ್ನು ಕಳೆದುಕೊಳ್ಳುತ್ತಿವೆ. ಅಕ್ರಮದ ವಿರುದ್ಧ ಧ್ವನಿ ಎತ್ತುವವರನ್ನು ಬೆದರಿಸುವ ಪ್ರಯತ್ನಗಳೂ ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಬಗ್ಗೆ K2 ನ್ಯೂಸ್ ಈ ಅಕ್ರಮದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಬಗ್ಗೆ ತನಿಖೆ ಮಾಡುತ್ತಿದ್ದು, ಕಾಂಗ್ರೆಸ್ ಬಿಜೆಪಿ ಮತ್ತು ದಲಿತ ಸಂಘಟನೆ ಹೆಸರುಗಳಲ್ಲಿ ಅಕ್ರಮ ಮರಂ ಸಾಗಾಟ ಮಾಡುತ್ತಿರುವವರು ಯಾರು ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಮುಂದೆ ಸರಣಿ ಲೇಖನೆಗಳ ಮೂಲಕ ಅಕ್ರಮ ನಿಲ್ಲುವವರೆಗೂ ಸುದ್ದಿ ಮಾಡಲಾಗುತ್ತದೆ.