ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪೆಟ್ರೋಲ್ ಬಂಕ್‌ನಲ್ಲೇ ಪಲ್ಸರ್ 220 ಸಿಸಿ ಬೈಕ್ ಏಕಾಏಕಿ ಹೊತ್ತಿ ಉರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮಾನ್ವಿ ಪಟ್ಟಣದ ಪೆಟ್ರೋಲ್ ಬಂಕ್‌ಗೆ ಬಂದಿದ್ದ ಸವಾರ ಬೈಕ್‌ಗೆ ಪೆಟ್ರೋಲ್ ಹಾಕಿಸಿಕೊಂಡು ಬಳಿಕ ಬೈಕ್ ಸ್ಟಾರ್ಟ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ಕಿಕ್ ಹೊಡೆಯುತ್ತಿದ್ದಂತೆ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಆತಂಕಗೊಂಡ ಸವಾರ ಬೈಕ್ ಅನ್ನು ಅಲ್ಲಿಯೇ ಬಿಟ್ಟು ಸ್ಥಳದಿಂದ ಓಡಿ ಹೋಗಿದ್ದಾನೆ.
ನಂತರ ಕೆಲವೇ ಕ್ಷಣಗಳಲ್ಲಿ ಬೈಕ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಬೆಂಕಿಯ ಜ್ವಾಲೆಗಳು ಮತ್ತಷ್ಟು ತೀವ್ರಗೊಂಡಿವೆ. ಇದರಿಂದ ಪೆಟ್ರೋಲ್ ಬಂಕ್‌ನಲ್ಲಿದ್ದ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಆದರೆ, ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಂಕ್ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಸಂಭವನೀಯ ಭಾರಿ ಅನಾಹುತ ತಪ್ಪಿದೆ.
ಮಂಗಳವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಬೈಕ್‌ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.