ರಾಯಚೂರು : ರಾತ್ರಿ ಸುರಿದ ಭಾರಿ ಮಳೆಯಿಂದ ರಾಯಚೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಮಕ್ತಲ್ ಪೇಟೆಯ ಕುಂಬಾರ ಓಣಿಯಲ್ಲಿ ಮಳೆ ನೀರು ಹಾಗೂ ಚರಂಡಿ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳು ಪರದಾಡುವಂತಾಗಿದೆ. ಚರಂಡಿ ನೀರಿನೊಂದಿಗೆ ಚೇಳು ಹಾಗೂ ಹಾವುಗಳು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.
ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ನಿವಾಸಿಗಳು ಇಡೀ ರಾತ್ರಿ ಹರಸಾಹಸ ಪಟ್ಟಿದ್ದಾರೆ. ಮಕ್ಕಳು ಹಾಗೂ ವೃದ್ಧರನ್ನು ಸುರಕ್ಷಿತವಾಗಿ ಇರಿಸಲು ಕುಟುಂಬಸ್ಥರು ಪರದಾಡಿದ್ದು, ಭಯದಲ್ಲೇ ರಾತ್ರಿ ಕಳೆದಿದ್ದಾರೆ. ಮಳೆ ಬಂದಾಗಲೆಲ್ಲ ಇದೇ ರೀತಿಯ ಸಮಸ್ಯೆ ಎದುರಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆ ನೀರು ಸರಾಗವಾಗಿ ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮನೆಗಳಿಗೆ ನೀರು ನುಗ್ಗುತ್ತಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಸಮಸ್ಯೆ ಪರಿಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ದೂರಿದ್ದಾರೆ.
ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿವಾಸಿಗಳು ಹಿಡಿಶಾಪ ಹಾಕಿದ್ದು, ಕೂಡಲೇ ಚರಂಡಿ ವ್ಯವಸ್ಥೆ ಸುಧಾರಿಸಿ ಮಳೆ ನೀರು ಮನೆಗಳಿಗೆ ನುಗ್ಗದಂತೆ ಶಾಶ್ವತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.