ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಟಿಡಿಪಿ ಹಾಗೂ ವೈಎಸ್ಆರ್ಸಿಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ.
ರಾಯಚೋಟಿ ಹಾಗೂ ಪುಂಗನೂರಿನಲ್ಲಿ ಕಲ್ಲು, ದೊಣ್ಣೆಗಳಿಂದ ಪರಸ್ಪರ ದಾಳಿ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ರಾಯಚೋಟಿಯ ಎಸ್ಎನ್ ಕಾಲೋನಿಯಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕೆಲವು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವೈಎಸ್ಆರ್ಸಿಪಿ ಕಚೇರಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.
ಇದೇ ವೇಳೆ ಪುಂಗನೂರಿನಲ್ಲಿ ವೈಎಸ್ಆರ್ಸಿಪಿ ಸಂಸದ ಪಿ.ವಿ. ಮಿಥುನ್ ರೆಡ್ಡಿ ಅವರ ಬೆಂಗಾವಲು ವಾಹನಗಳ ಮೇಲೆ ಕಲ್ಲು, ದೊಣ್ಣೆ ಹಾಗೂ ಕಬ್ಬಿಣದ ರಾಡ್ಗಳಿಂದ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ.
ಈ ಘಟನೆಯಲ್ಲಿ ಅವರ ಭದ್ರತಾ ಸಿಬ್ಬಂದಿಗೂ ಗಾಯಗಳಾಗಿವೆ. ಎರಡೂ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಕೆಲವೆಡೆ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ರಾಯಚೋಟಿಯಲ್ಲಿ ಸದ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.