ಸಿಂಧನೂರು: ತಾಲ್ಲೂಕಿನ ಶಾಂತಿನಗರ ಕ್ಯಾಂಪ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಐದು ವರ್ಷದ ಬಾಲಕಿಯ ಮೇಲೆ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಶಾಂತಿನಗರದ ನಿವಾಸಿ ಹನುಮಂತ ಕುಂಬಾರ ಅವರ ಪುತ್ರಿ ಶ್ರಾವಣಿ (5) ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದಾಳೆ. ಬಾಲಕಿಯ ಕೈ ಮತ್ತು ಕಾಲುಗಳಿಗೆ ನಾಯಿಗಳು ಕಚ್ಚಿ ಗಾಯಗೊಳಿಸಿದ್ದು, ತಕ್ಷಣವೇ ಸಿಂಧನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಾಂತಿನಗರ ಕ್ಯಾಂಪ್‌ನಲ್ಲಿ ಬೀದಿ ನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ರಸ್ತೆಯಲ್ಲಿ ಸಂಚರಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಬೀದಿ ನಾಯಿಗಳಿಂದ ಪ್ರತಿನಿತ್ಯ ತೊಂದರೆಯಾಗುತ್ತಿದೆ.
ಇದೇ ಕ್ಯಾಂಪ್‌ನಲ್ಲಿ ಕಳೆದ ಜುಲೈ ತಿಂಗಳಲ್ಲಿ ಬೀದಿ ನಾಯಿಗಳ ದಾಳಿಗೆ 18 ತಿಂಗಳ ಹಸುಗೂಸು ಬಲಿಯಾಗಿದ್ದ ಹೃದಯವಿದ್ರಾವಕ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಅಷ್ಟರಲ್ಲೇ ಮತ್ತೊಂದು ದಾಳಿ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಬೀದಿ ನಾಯಿಗಳ ಉಪಟಳದ ಕುರಿತು ಈಗಾಗಲೇ ಗೊರೆಬಾಳ ಗ್ರಾಮ ಪಂಚಾಯಿತಿ ಪಿಡಿಒ ಲಿಂಗಪ್ಪ ಅವರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರಾದ ವಿರೂಪಾಕ್ಷಿ ವಗ್ಗರ ಹಾಗೂ ಮಂಜುನಾಥ ದೇವರಮನಿ ಆರೋಪಿಸಿದ್ದಾರೆ.
ಮತ್ತೊಂದು ಜೀವ ಬಲಿಯಾಗುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.