ರಾಯಚೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KKRTC) ಬಸ್ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಮಂತ್ರಾಲಯ ಸಮೀಪದ ಚಟ್ನಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಿಕ್ಕಯ್ಯ (55) ಎಂದು ಗುರುತಿಸಲಾಗಿದೆ.
ರಾಯಚೂರಿನಿಂದ ಮಂತ್ರಾಲಯದತ್ತ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್, ಚಟ್ನಪಲ್ಲಿ ಗ್ರಾಮದಲ್ಲಿ ಮತ್ತೊಂದು ಬಸ್‌ಗೆ ಸೈಡ್ ನೀಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದೇ ವೇಳೆ ರಸ್ತೆ ದಾಟುತ್ತಿದ್ದ ತಿಕ್ಕಯ್ಯ ಅವರ ಮೇಲೆ ಬಸ್ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬಸ್ ಡಿಕ್ಕಿಯ ರಭಸಕ್ಕೆ ತಿಕ್ಕಯ್ಯ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ನಗರದ ಎರಡನೇ ಘಟಕಕ್ಕೆ ಸೇರಿದ ಸಾರಿಗೆ ಬಸ್ ಇದಾಗಿದೆ ಎಂದು ತಿಳಿದುಬಂದಿದೆ.
ಚಾಲಕನ ನಿರ್ಲಕ್ಷ್ಯ ಹಾಗೂ ಅಜಾಗರೂಕ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆಯ ಬಳಿಕ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಬಸ್ ಚಾಲಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಈ ಘಟನೆ ಮಾಧವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಹಾಗೂ ಚಾಲಕನ ನಿರ್ಲಕ್ಷ್ಯದ ಕುರಿತು ತನಿಖೆ ಮುಂದುವರಿಸಿದ್ದಾರೆ.