ರಾಯಚೂರು: ಥಾರ್ ಹಾಗೂ ಮಹಿಂದ್ರಾ ಎಕ್ಸ್‌ಯುವಿ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರ ಕುಟುಂಬಕ್ಕೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು, ಶಾಸಕರ ಸಹೋದರನ ಪುತ್ರ ಮಲ್ಲೇಶ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಎರಡೂ ಕಾರುಗಳಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹೊನ್ನಹಳ್ಳಿ ಬೆಂಬ ಗ್ರಾಮದ ಸಮೀಪ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಯಾದಗಿರಿ ಮೂಲದ ಇಬ್ಬರು ವ್ಯಕ್ತಿಗಳಿಗೂ ಗಂಭೀರ ಗಾಯಗಳಾಗಿವೆ ಎನ್ನಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಲಿಂಗಸುಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.